ಲಕ್ಷ್ಮಣ ಸವದಿಗೆ ಸಚಿವ ಸ್ಥಾನ….? ಕಾಂಗ್ರೆಸ್ ನಲ್ಲಿ ಸಂಪುಟ ಸಂಚಲನ
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಸಂಪುಟ ಪುನರ್ ರಚನೆ ಮಾತು ಜೋರಾಗಿವೆ, ಈ ಮಧ್ಯೆ ಸುಮಾರು ಐದಕ್ಕೂ ಅಧಿಕ ಜನ ಸಚಿವರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಚರ್ಚೆ ಜೋರಾಗಿವೆ. ಜೊತೆಗೆ ಪಕ್ಷ ಸಂಘಟನೆ ದೃಷ್ಟಿಯಿಂದ ಕೆಲವರನ್ನು ಕೈಬಿಡುವ ಲೆಕ್ಕಾಚಾರದಲ್ಲಿ ಹೈಕಮಾಂಡ್ ಚಿಂತನೆ ನಡೆಸಿದೆ.
ಸಂಪುಟ ಪುನರ್ ರಚನೆ ಚರ್ಚೆ ಒಂದುಕಡೆಯಾದರೆ ಇತ್ತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗುತ್ತದೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ನಾಯಕರಾಗಿರುವ ಸವದಿಗೆ ಸಂಪುಟದಲ್ಲಿ ಸ್ಥಾನಮಾನ ನೀಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿವೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಅಥಣಿಯಿಂದ ಶಾಸಕರಾಗಿ ಆಯ್ಕೆಯಾದ ಸವದಿ ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಸವದಿ ಹಾಗೂ ಸಿಎಂ ಮೂವರು ಒಂದೇ ಕಾರಿನಲ್ಲಿ ಸುತ್ತಾಟ ನಡೆಸಿದ್ದು ಸಂಧಾನ ಮಾತುಗಳು ಕೇಳಿಬರುತ್ತಿವೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದಿದ್ದ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಮೂಲಕ ದಾಖಲೆ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಅಷ್ಟೇ ಅಲ್ಲದೆ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳನ್ನು ಕಾಂಗ್ರೆಸ್ ಗೆ ಸೆಳೆಯುವ ಮೂಲಕ ಬೃಹತ್ ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
ಆದರೆ ಸರ್ಕಾರ ರಚನೆ ಸಂದರ್ಭದಲ್ಲಿ ಸವದಿ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರಲಿಲ್ಲ. ಮುಂಬರುವ ದಿನಗಳಲ್ಲಿ ನಿಮಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದ ಡಿ.ಕೆ ಶಿವಕುಮಾರ್ ಸಧ್ಯ ಹೈಕಮಾಂಡ್ ಬಳಿ ಸವದಿ ಪರ ಬ್ಯಾಟ್ ಬೀಸುವ ಸಾಧ್ಯತೆ ಇದ್ದು ಈ ಬಾರಿ ಸವದಿಗೆ ಮತ್ತೊಮ್ಮೆ ಅಧಿಕಾರ ಗದ್ದುಗೆ ಸಿಗುವ ಸಾಧ್ಯತೆ ದಟ್ಟವಾಗಿದೆ.


