
ಕಾಗವಾಡ : 50 ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣಗೊಂಡ ವರ್ಷದಲ್ಲೇ ಕೊಚ್ಚಿಹೊಯ್ತು..!

ಬೆಳಗಾವಿ : 50 ಲಕ್ಷ ರೂ. ವೆಚ್ಚದಲ್ಲಿ ಕಳೆದ ವರ್ಷ ನಿರ್ಮಾಣವಾಗಿದ್ದ ಕೆಳ ಹಂತದ ಸೇತುವೆ ಮಳೆ ನೀರಿಗೆ ಕೊಚ್ಚಿ ಹೋಗಿರುವ ಘಟನೆ ಕಾಗವಾಡ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಅಗ್ರಾಣಿ ನದಿ ಹಳ್ಳಕ್ಕೆ ಸಂಬರಗಿ – ಆಜೂರ್ ಗ್ರಾಮಗಳ ಸಂಪರ್ಕ ಸೇತುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕೇವಲ ಎರಡು ದಿನಗಳಿಂದ ಸುರಿದ ಮಳೆಯಿಂದ ಉಂಟಾದ ಪ್ರವಾಹಕ್ಕೆ ಸೇತುವೆ ಕೊಚ್ಚಿ ಹೋಗಿದ್ದು ಇದಕ್ಕೆ ಕಳಪೆ ಕಾಮಗಾರಿ ಕಾರಣ ಎಂದು ಜನ ಆರೋಪಿಸಿದ್ದಾರೆ.
ಕಳೆದ ವರ್ಷ ಕಾಗವಾಡ ಶಾಸಕ ರಾಜು ಕಾಗೆ 50 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದರು. ಸಣ್ಣ ನೀರಾವರಿ ಇಲಾಖೆಯಿಂದ ನಡೆದ ಸೇತುವೆ ನಿರ್ಮಾಣ ಕಾಮಗಾರಿ ಕಳಪೆಯಾಗಿದ್ದು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.