ಡಿಸಿಸಿ ಅಖಾಡಕ್ಕೆ ಕತ್ತಿ ಸಾಹುಕಾರ್ ; ನಾಮಪತ್ರ ಸಲ್ಲಿಕೆ
ಬೆಳಗಾವಿ : ಇತ್ತೀಚೆಗೆ ನಡೆದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಜಾರಕಿಹೊಳಿ ಸಹೋದರರಿಗೆ ಸೆಡ್ಡು ಹೊಡೆದಿದ್ದ ಮಾಜಿ ಸಂಸದ ರಮೇಶ್ ಕತ್ತಿ ಸಧ್ಯ ಡಿಸಿಸಿ ಅಖಾಡಕ್ಕೆ ಧುಮುಕಿದ್ದಾರೆ.
ಮಂಗಳವಾರ ನಗರದ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಹುಕ್ಕೇರಿ ಕ್ಷೇತ್ರದಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಮೇಶ್ ಕತ್ತಿ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರಬಂದಿದ್ದರು.
ಈಗಾಗಲೇ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಒಂದು ಬಣದ ಸದಸ್ಯರು ಚುನಾವಣೆಗೆ ಸಜ್ಜಾಗಿದ್ದಾರೆ. ಈ ಮಧ್ಯೆ ರಮೇಶ್ ಕತ್ತಿ ಅತೃಪ್ತರನ್ನು ಒಗ್ಗೂಡಿಸುವ ಮೂಲಕ ಜಾರಕಿಹೊಳಿ ಸಹೋದರರಿಗೆ ಪೈಪೋಟಿ ನೀಡಲು ಮುಂದಾಗಿದ್ದಾರೆ.


