ಕಿತ್ತೂರು ಉತ್ಸವಕ್ಕೆ ಅಂಟಿದ ಮೌಢ್ಯ ; ಅಧಿಕಾರ ಕಳೆದುಕೊಳ್ಳುತ್ತಾರಾ ಸಿಎಂ ಸಿದ್ದರಾಮಯ್ಯ…?

ಬೆಳಗಾವಿ : ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಮೌಢ್ಯದ ರೋಗ ದಶಕಗಳಿಂದ ಅಂಟಿದೆ. ಇಲ್ಲಿ ಭಾಗವಹಿಸುವ ಮುಖ್ಯಮಂತ್ರಿ ತಮ್ಮ ಅಧಿಕಾರ ಹುದ್ದೆ ಕಳೆದುಕೊಳ್ಳುತ್ತಾರೆ ಎಂಬ ಮಾತಿದೆ. ಮೌಢ್ಯಕ್ಕೆ ಹೆದರಿ ಅನೇಕರು ಕಿತ್ತೂರು ಉತ್ಸವದಿಂದ ದೂರ ಉಳಿದಿದ್ದರೆ ಇನ್ನೂ ಅನೇಕರು ಭಾಗವಹಿಸು ಅಧಿಕಾರ ಕಳೆದುಕೊಂಡ ಉದಾಹರಣೆಯೂ ಇವೆ.
ಸಧ್ಯ ಸಿಎಂ ಸಿದ್ದರಾಮಯ್ಯ ಮೌಢ್ಯಕ್ಕೆ ಸೆಡ್ಡು ಹೊಡೆದು ಕಿತ್ತೂರು ಉತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ ಈಗಾಗಲೇ ಸಿಎಂ ಬದಲಾವಣೆ ಕೂಗು ಜೋರಾಗಿದೆ. ಈ ಮಧ್ಯೆ ಇಂತಹ ಮೌಢ್ಯದ ಸಂದೇಶವೂ ಎಲ್ಲೆಡೆ ಹರಿದಾಡುತ್ತಿದೆ.
ಪ್ರಗತಿಪರ ಚಿಂತನೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರು ಮೌಢ್ಯಕ್ಕೆ ಸೆಡ್ಡು ಹೊಡೆದು ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಶನಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಭಾಷಣ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಇವರು. ಚನ್ನಮ್ಮನ ಹೋರಾಟದ ಬಗ್ಗೆ ನಾಡಿಗೆ ತಿಳಿಸುವುದಕ್ಕಾಗಿ 2017 ರಲ್ಲಿ ನಮ್ಮ ಸರಕಾರವೇ ಕಿತ್ತೂರು ಚೆನ್ನಮ್ಮ ಜಯಂತಿ ಆರಂಭಿಸಿತು ಎಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ. ಚನ್ನಮ್ಮನ ಸಾಹಸಗಾಥೆ ತಿಳಿಸಲು ಜಯಂತಿ ಆರಂಭಿಸಲಾಯಿತೇ ಹೊರತು ರಾಜಕೀಯ ಕಾರಣಕ್ಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ 201 ನೇ ಕಿತ್ತೂರು ಉತ್ಸವದ ಅಂಗವಾಗಿ ಶನಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ತೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಹುನಗುಂದ ಶಾಸಕರೂ ಆಗಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಮಾತನಾಡಿ, ವೀರಮಾತೆ ಜಯಂತ್ಯೋತ್ಸವ ಆಚರಣೆಯ 25 ವರ್ಷಗಳ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಡೇರಿಸಿದರು.
ಇದಲ್ಲದೇ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಅವರೇ. ಚನ್ನಮ್ಮನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ರಾಜ್ಯ ಸರಕಾರದ ವತಿಯಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಿರುವುದು ಕೂಡ ಸಿದ್ದರಾಮಯ್ಯನವರು. ಆದ್ದರಿಂದ ಸಮಾಜದ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಕರ್ನಾಟಕ ವಿಧಾನಸಭೆಯ ಸರಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ,
ಶಾಸಕರಾದ ಎನ್.ಎಚ್.ಕೋನರೆಡ್ಡಿ, ಆಸಿಫ್(ರಾಜು) ಸೇಠ, ವಿಶ್ವಾಸ್ ವೈದ್ಯ, ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ,
ವಾಯವ್ಯ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನಿಲ್ ಹನಮಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ್ ನಾವಲಗಟ್ಟಿ, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


