ಬೈಲಹೊಂಗಲ ಮೂಲದ ಪೊಲೀಸ್ ಇನ್ಸ್ಪೆಕ್ಟರ್ ಹೃದಯಾಘಾತದಿಂದ ನಿಧನ
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಸಿಟಿ ಸ್ಪೆಷಲ್ ಬ್ರಾಂಚ್ (CSB) ಇನ್ಸ್‌ಪೆಕ್ಟರ್ ಶಿವಪ್ಪ ನಾಯಕರ್ (Shivappa Nayakar) ಅವರು ಇಂದು ಹೃದಯಾಘಾತದಿಂದ (Heart Attck) ನಿಧನರಾಗಿದ್ದಾರೆ. 56 ವರ್ಷದ ಇವರು 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದು, ಕಳೆದ ಹಲವು ವರ್ಷಗಳಿಂದ ಇಲಾಖೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು.
ನಿನ್ನೆ ರಾತ್ರಿ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಸೌಮ್ಯ ಸ್ವಭಾವದ ಶಿವಪ್ಪ ಅವರು ಕಿರಿಯ ಅಧಿಕಾರಿಗಳಿಗೆ ಸದಾ ಮಾರ್ಗದರ್ಶಕರಾಗಿದ್ದರು. ಇವರ ಅಕಾಲಿಕ ನಿಧನವು ಇಡೀ ಪೊಲೀಸ್ ವಲಯದಲ್ಲಿ ಆಘಾತ ಮತ್ತು ತೀವ್ರ ಶೋಕವನ್ನುಂಟು ಮಾಡಿದೆ.
ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸೋಮಹಟ್ಟಿ ಗ್ರಾಮದವರಾದ ಶಿವಪ್ಪ ನಾಯಕರ್ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಸ್ವಗ್ರಾಮಕ್ಕೆ ಕೊಂಡೊಯ್ಯುವ ಸಾಧ್ಯತೆಯಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡದಿಂದಾಗಿ ಪೊಲೀಸ್ ಅಧಿಕಾರಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವುದು ಇಲಾಖೆಯಲ್ಲಿ ಆತಂಕ ಮೂಡಿಸಿದೆ.

