ಬೆಳಗಾವಿ : ಸಿಪಿಐ ಶ್ರೀಶೈಲ್ ಚೌಗಲಾ ಆತ್ಮಹತ್ಯೆಗೆ ಶರಣು..!
ಬೆಳಗಾವಿ : ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್)ಯ ಸಿಪಿಐ ಶ್ರೀಶೈಲ ಚೌಗಲಾ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ.
ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್ಡಿಆರ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಘಟನೆ ಕುರಿತು ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರ ಆತ್ಮಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.

