ಬೆಳಗಾವಿ : ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ನಡೆದ ಪ್ರತಿಭಟನೆಯ ವೇಳೆ ಶಾಸಕ ಬಿಬಿ ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಅದರ ಅಂಗವಾಗಿ ಬೆಳಗಾವಿಯಲ್ಲೂ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಈ ಪ್ರತಿಭಟನೆಗಳಿಗೆ ವಿದೇಶಗಳಿಂದ ಹಣ ಹರಿದು ಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ದೂರಿದರು.
ಮಾಜಿ ಶಾಸಕ ಅನೀಲ್ ಬೆನಕೆ ಮಾತನಾಡಿ, ಬೆಳಗಾವಿಯಲ್ಲಿ ನಡೆದ ಇತ್ತೀಚಿನ ಪ್ರತಿಭಟನೆಯಲ್ಲಿ ಒಂದೇ ಸಮುದಾಯದ ಯುವಕರು ಭಾಗವಹಿಸಿದ್ದರೆಂದು ಆರೋಪಿಸಿದರು. ದೇಶಾದ್ಯಂತ ಅರಾಜಕತೆ ಸೃಷ್ಟಿಸುವ ಉದ್ದೇಶದಿಂದ ಕಾಂಗ್ರೆಸ್ ಈ ವಿಚಾರವನ್ನು ಮುಂದಿಟ್ಟುಕೊಂಡಿದೆ ಎಂದರು.
ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಈ ಹಿಂದೆ ವಿವಿಧ ರಾಜ್ಯಗಳಲ್ಲಿಯೂ ನಡೆದಿದ್ದರೂ ಕಾಂಗ್ರೆಸ್ ಆಗ ಪ್ರತಿಭಟನೆ ನಡೆಸಿರಲಿಲ್ಲ. ಈಗ ಮಾತ್ರ ನೀಟ್ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದರು.
ನಿನ್ನೆ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಾಚ್ಯ ಪದಗಳಿಂದ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸುತ್ತ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದೆ.
ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಹಲಗೇಕರ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಠಗಿಮಠ, ಮಾಜಿ ಶಾಸಕ ವಿಶ್ವನಾಥ ಪಾಟೀಲ, ಬಿಜೆಪಿ ಮುಖಂಡರಾದ ಡಾ. ನಯನಾ ಭಸ್ಮೆ, ಮಹಾಂತೇಶ್ ವಕ್ಕುಂದ, ರಮೇಶ್ ದೇಶಪಾಂಡೆ, ನಾಗರಾಜ ಗಸ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
*******
ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನ
ಕಾಂಗ್ರೆಸ್ ವಿರುದ್ಧ ಶುಕ್ರವಾರ ಹೋರಾಟ ನಡೆಸಿದ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಈ ವೇಳೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ನಗರ ಪೋಲಿಸ್ ಆಯುಕ್ತರು ಖುದ್ದು ಬ್ಯಾರಿಕೆಡ್ ಅಟ್ಟ ಹಾಕಿ ಬಿಜೆಪಿ ಮುಖಂಡರನ್ನು ತಡೆಯುವ ಪ್ರಯತ್ನ ಮಾಡಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು.


