ಬೆಳಗಾವಿ: ಪತ್ರಕರ್ತರ ಹಿತಾಸಕ್ತಿ ಕಾಪಾಡುವುದು ಹಾಗೂ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾಧ್ಯಕ್ಷ ಡಾ. ಭೀಮಶಿ ಜಾರಕಿಹೊಳಿ ಹೇಳಿದರು.

ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯು ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಸಂಘಟನೆಯ ಬಲವರ್ಧನೆ, ಜಿಲ್ಲಾ ಘಟಕದ ಮುಂದಿನ ಚಟುವಟಿಕೆಗಳು ಹಾಗೂ ಪತ್ರಕರ್ತರ ಹಿತಾಸಕ್ತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಮುಂಬರುವ ದಿನಗಳಲ್ಲಿ ರಾಜ್ಯ ಸಂಘದ ಸಹಯೋಗದೊಂದಿಗೆ ಬೆಳಗಾವಿಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮವೊಂದನ್ನು ಆಯೋಜಿಸುವ ಉದ್ದೇಶವಿದೆ ಎಂದು ಡಾ. ಭೀಮಶಿ ಜಾರಕಿಹೊಳಿ ಸಭೆಗೆ ತಿಳಿಸಿದರು.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಘಟನೆಯನ್ನು ಇನ್ನಷ್ಟು ಕ್ರಿಯಾಶೀಲಗೊಳಿಸುವುದು, ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಂಘದ ಚಟುವಟಿಕೆಗಳನ್ನು ವಿಸ್ತರಿಸುವ ಕುರಿತು ಪದಾಧಿಕಾರಿಗಳು ಅಭಿಪ್ರಾಯ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಸಂಘದ ಸದಸ್ಯರ ಗುರುತಿನ ಚೀಟಿಗಳನ್ನು ಆಯಾ ತಾಲೂಕುಗಳ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಿಗೆ ಜಿಲ್ಲಾಧ್ಯಕ್ಷ ಡಾ. ಭೀಮಶಿ ಜಾರಕಿಹೊಳಿ ವಿತರಿಸಿದರು. ಸಂಬಂಧಿಸಿದ ತಾಲೂಕುಗಳ ಸದಸ್ಯರಿಗೆ ಗುರುತಿನ ಚೀಟಿಗಳನ್ನು ತಲುಪಿಸುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಳೋಜಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಲ್ಲಿಕಾರ್ಜುನರೆಡ್ಡಿ ಗೊಂದಿ, ಉಪಾಧ್ಯಕ್ಷರಾದ ಕುಂತಿನಾಥ ಕಲಮನಿ, ತಾನಾಜಿರಾವ್‌ ಮುರಂಕರ, ಕಾರ್ಯದರ್ಶಿಗಳಾದ ಸದಾಶಿವ ಸಂಕಪ್ಪಗೋಳ, ರವಿ ಹುಲಕುಂದ, ರಾಜು ಬಾಗಲಕೋಟೆ ಹಾಗೂ ಜಿಲ್ಲಾ ಘಟಕದ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.