ಬೆಳಗಾವಿ : ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾದ ಸಚಿವ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಸೋಮವಾರ ತಡರಾತ್ರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಮಾಜಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಭ್ರಷ್ಟಾಚಾರ ಆರೋಪ ಹೊತ್ತ ಸಚಿವರನ್ನು ಕಾಂಗ್ರೆಸ್ ಸರಕಾರ ಸಂಪುಟದಲ್ಲಿ ನೇಮಕ ಮಾಡಿಕೊಂಡಿದ್ದು ವಾಲ್ಮೀಕಿ ಸಮುದಾಯಕ್ಕೆ ಮಾಡಿರುವ ದ್ರೋಹ. ಕೂಡಲೇ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದರು.‌

ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಜನ, ಜಾನುವಾರುಗಳು ನೀರಿಗಾಗಿ ಪರಿತಪಿಸುವ ವಾತಾವರಣ ನಿರ್ಮಾಣವಾಗಿದೆ. ಸರಕಾರ ಮೊದಲು ಜನರ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಭ್ರಷ್ಟಾಚಾರ ಆರೋಪ ಹೊತ್ತ ಸಚಿವರನ್ನು ಸಂಪುಟದಿಂದ ಕೈಬಿಡದಿದ್ದರೆ ಬಿಜೆಪಿ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದರು.

ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಮಾತನಾಡಿ. ವಾಲ್ಮೀಕಿ ಸಮುದಾಯದ ಜನರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ಹಗರಣ ಮಾಡಿರುವ ಸಚಿವ ನಾಗೇಂದ್ರ ಸಂಪುಟದಲ್ಲಿ ಮುಂದುವರಿಯುವ ನೈತಿಕತೆ ಉಳಿಸಿಕೊಂಡಿಲ್ಲ. ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾಜಿ ಶಾಸಕ ಸಂಜಯ್ ಪಾಟೀಲ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.