ಬೆಳಗಾವಿ : ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಮನೆಗಳ ಮೇಲೆ ಇಡಿ ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆ ಗುರುವಾರ ಎರಡನೇ ದಿನವೂ ಮುಂದುವರಿದಿದೆ.
ಸತೀಶ್ ಜಾರಕಿಹೊಳಿ ಅವರ ಬಾಮೈದ ವೈ. ಮಂಜುನಾಥ್ ಅವರ ನಿವಾಸದಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಗೋಕಾಕ ನಗರದ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿಯೂ ಶೋಧ ಕಾರ್ಯ ಮುಂದುವರಿದಿದೆ.
ಇದರೊಂದಿಗೆ ಬೆಳಗಾವಿ ನಗರದ ಸತೀಶ್ ಜಾರಕಿಹೊಳಿ ಅವರ ಆಪ್ತ ಡಾ. ಗಿರೀಶ್ ಸೋನವಾಲ್ಕರ್ ಹಾಗೂ ಆಪ್ತ ಕಾರ್ಯದರ್ಶಿ ಮಲಗೌಡ ಪಾಟೀಲ ಅವರ ನಿವಾಸಗಳಲ್ಲೂ ಇಡಿ ಅಧಿಕಾರಿಗಳು ದಾಖಲೆಗಳು ಹಾಗೂ ಇತರೆ ಮಾಹಿತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ವಿದೇಶಿ ಅಕ್ರಮ ಹೂಡಿಕೆ ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳ ಪರಿಶೋಧನೆ ತೀವ್ರಗೊಂಡಿದೆ. ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಯಾವ ದಾಖಲೆಗಳು ಹಾಗೂ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.


