ಹುಬ್ಬಳ್ಳಿ : ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಹುಬ್ಬಳ್ಳಿಗೆ (Hubballi) ಆಗಮಿಸಿದ್ದು, ಚೆನ್ನಮ್ಮ ವೃತ್ತದಲ್ಲಿ (Chennamma Circle) ಸಾವಿರಾರು ರೈತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿ ಮಾಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಜೊತೆಗೆ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (MSP) ಹೆಚ್ಚಿಸಬೇಕು ಹಾಗೂ ರೈತರಿಗೆ ನ್ಯಾಯಯುತ ಬೆಲೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ.
ರೈತ ಹೋರಾಟಗಾರ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಿಂದ ರೈತರು ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಚೆನ್ನಮ್ಮ ವೃತ್ತದಿಂದ ಪ್ರಹ್ಲಾದ್ ಜೋಶಿ ಅವರ ನಿವಾಸದತ್ತ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೊನೆಗೆ ರೈತರು ಜೋಶಿ ಅವರ ನಿವಾಸದ ಬಳಿ ತಲುಪಿ ಪ್ರತಿಭಟನೆ ನಡೆಸಿದ್ದಾರೆ. ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ಮುಂದೆ ಸಾಗಲು ರೈತರು ಯತ್ನಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.





