ಬೆಳಗಾವಿ : ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಣೆ ಮಾಡಿ ಜಿ.ಪಿ.ಎಸ್. ಆಧಾರಿತ ಛಾಯಾಚಿತ್ರಗಳೊಂದಿಗೆ ಕಾರ್ಯಕ್ರಮದ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದರು.
ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ. ಗಡಿ ಭಾಗದ ಕೆಲ ಶಾಲೆಗಳಲ್ಲಿ ಶಿಕ್ಷಕರು ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡದೆ ನಾಡವಿರೋಧಿ ನಿಲುವು ತಾಳುತ್ತವೆ ಎಂಬ ಆರೋಪಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯೆ ನೀಡಿದರು.
ಕರ್ನಾಟಕ ರಾಜ್ಯೋತ್ಸವ ಆಚರಣೆ ನಂತರ ಜಿಪಿಎಸ್ ಮಾದರಿಯಲ್ಲಿ ಫೋಟೋ ಕಳುಹಿಸಿಕೊಡಬೇಕು. ಈ ಕುರಿತು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು, ಸದಲಗಾದಲ್ಲಿನ ಕುವೆಂಪು ಮಾದರಿ ಶಾಲೆಯ ಸ್ಥಿತಿಗತಿಯ ವರದಿ ಸಲ್ಲಿಸಿ ವಿಶೇಷ ಅನುದಾನ ಕೊಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನ.೧ ರಂದು ಜರುಗಲಿರುವ ರಾಜ್ಯೊತ್ಸವದ ಭವ್ಯ ಮೆರವಣಿಗೆ ಮಾರ್ಗದುದ್ದಕ್ಕೂ ಕನ್ನಡ ನಾಡಿನ ಮಹನಿಯರ ಭಾವಚಿತ್ರಗಳನ್ನು ಅಳವಡಿಸುವುದರ ಜೊತೆಗೆ ರೂಪಕಗಳಿಗೆ ಪ್ರಶಸ್ತಿ ನೀಡಲಾಗುವದು. ಬೆಳಗಾವಿಯ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಸಭೆಯಲ್ಲಿ ನಗರ ಪೋಲಿಸ್ ಆಯುಕ್ತರಾದ ಪ್ರಕಾಶ ನಿಕಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕನ್ನಡಪರ ಸಂಘಟನೆಗಳು, ಪದಾಧಿಕಾರಿಗಳು ಹಾಜರಿದ್ದರು.
ಕರಾಳ ದಿನಾಚರಣೆಗೆ ಇಲ್ಲ ಅವಕಾಶ : ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡ ಪರ ಸಂಘಟನೆಗಳ ಮನವಿಗೆ ಸ್ಪಂಧಿಸಿದ ಜಿಲ್ಲಾಧಿಕಾರಿಗಳು ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಗೆ ತಿಳಿಸಿದರು.




