ಬೆಳಗಾವಿ : ಕಬ್ಬಿಗೆ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಬೀದಿಗಿಳಿದಿದ್ದು ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಸೋಮವಾರ ದೆಹಲಿಯಲ್ಲಿ ಕೇಂದ್ರ ಸಚಿವರ ಜೊತೆ ರೈತ ಸಂಘಟನೆ ಸದಸ್ಯರು ನಡೆಸಿದ ಸಭೆ ವಿಫಲವಾದ ಬೆನ್ನಲ್ಲೇ ಮಂಗಳವಾರ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ರೈತ ಸಂಘಟನೆ ಕರೆ ನೀಡಿತ್ತು.
ಮಂಗಳವಾರ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಂದ್ ಮಾಡಿದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ತಮ್ಮ ಆಕ್ರೋಶ ಹಿರಹಾಕುತ್ತಿದ್ದಾರೆ.
ಅಷ್ಟೇ ಅಲ್ಲದೆ ಹಿರೇಬಾಗೇವಾಟಿ ಟೋಲ್ ರಸ್ತೆ ಸೇರಿದಂತೆ ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ – ಧಾರವಾಡ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸುಗಮ ಸಂಚಾರಕ್ಕೆ ಪೊಲೀಸರಿಂದ ಹರಸಾಹಸ : ಸಧ್ಯ ರೈತರ ಪ್ರತಿಭಟನೆ ಕಿಚ್ಚು ಹೆಚ್ಚುತ್ತಿರುವ ಸಂದರ್ಭದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರದಿಂದ ಬೆಳಗಾವಿ ಮಾರ್ಗವಾಗಿ ಬರುವ ವಾಹನಗಳಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಹಾಗೆಯೆ ಹುಬ್ಬಳ್ಳಿ – ಧಾರವಾಡದಿಂದ ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ತೆರಳುವ ರಸ್ತೆ ಸಂಚಾರಕ್ಕೆ ಹೊಸ ಮಾರ್ಗಸೂಚಿಯನ್ನು ಪೊಲೀಸ್ ಇಲಾಖೆ ನೀಡಿದೆ.





