ಬೆಂಗಳೂರು : ಸಮಾಜ ಸುಧಾರಕರಾದ ವಿಶ್ವಗುರು ಬಸವಣ್ಣನವರ ಬಗ್ಗೆ ಲೇಖಕ ರವಿ ಹಂಜ್ (Ravi Hanj) ಬರೆದಿರುವ ಬಸವಮಂಟಪ (Basava Mantapa ) ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.
ಪುಸ್ತಕದಲ್ಲಿ ಬಸವಣ್ಣನವರನ್ನು ಹಾಗೂ ಲಿಂಗಾಯತರನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕೃತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ( Veerashaiva Lingayath ) ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಸಮುದಾಯದ ಹಲವು ನಾಯಕರು ಕೃತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಲೇಖಕ ರವಿ ಹಂಜ್ ಬಸವಣ್ಣನವರ ಬಗ್ಗೆ ಆಡಿರುವ ಅವಹೇಳನಕಾರಿ ಮಾತುಗಳ ವಿಡಿಯೋಗಳನ್ನು ಸಾಮಾಜಿಕ ತಾಣಗಳಿಂದ ತೆಗೆದುಹಾಕುವುದರ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಒಪ್ಪಿಗೆ ನೀಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬಸವಣ್ಣನವರು, ಬಸವಾದಿ ಶಿವಶರಣರು, ವಚನ ಸಾಹಿತ್ಯ ಹಾಗೂ ಕನ್ನಡ ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಘನತೆಗೆ ಧಕ್ಕೆ ತರುವ ಪ್ರಯತ್ನಗಳ ಕುರಿತು ನಮ್ಮ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯ ಆರಂಭದಲ್ಲೇ ಈ ಗಂಭೀರ ವಿಚಾರವನ್ನು ಪ್ರಸ್ತಾಪಿಸಿದೆ. ಬಸವಣ್ಣನವರ ವ್ಯಕ್ತಿತ್ವ ಹಾಗೂ ವಚನ ಪರಂಪರೆಯ ಘನತೆಗೆ ಧಕ್ಕೆ ತರುತ್ತಿರುವ ಕೃತ್ಯಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಒತ್ತಾಯಿಸಿದೆ ಎಂದು ಎಂಬಿ ಪಾಟೀಲ್ ತಿಳಿಸಿದ್ದಾರೆ.
ವಿವಾದಿತ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪುಸ್ತಕದ ಪ್ರಕಾಶಕರೂ ಆದ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯವನ್ನು ಸಂಪುಟ ಸಭೆ ವ್ಯಕ್ತಪಡಿಸಿದೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.





