ವಂಟಮೂರಿ ಮಹಿಳೆ ಮೇಲೆ ಹಲ್ಲೆ ; ಪ್ರಕರಣ ಸಿಐಡಿಗೆ ಹಸ್ತಾಂತರ
ಬೆಳಗಾವಿ : ಹೊಸ ವಂಟಮೂರಿ ಗ್ರಾಮದ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಸಧ್ಯ ಈ ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ಹಾಗೂ ಬಿಜೆಪಿಯ ಸತ್ಯ ಶೋಧನಾ ತಂಡದ ಸದಸ್ಯರು ಶನಿವಾರ ಭೇಟಿ ನೀಡಿದರು. ಭಾನುವಾರ ಕೂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದು ಪರಿಶೀಲಿಸಿದರು. ಮಾಹಿತಿ ಸಂಗ್ರಹಿಸಿತ್ತು.
ಈ ಕುರಿತು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧರಿಸಿದೆ. ಸೋಮವಾರ ಸಿಐಡಿ ಅಧಿಕಾರಿಗಳ ತಂಡ ಪರಿಶೀಲನೆಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರೇಮಿಗಳಿಬ್ಬರು ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ, ಯುವಕನ ತಾಯಿ ಮೇಲೆ ದೌರ್ಜನ್ಯ ಎಸಗಲಾಗಿದೆ. ವಾರದ ಹಿಂದೆ ಘಟನೆ ನಡೆದಿದ್ದು, ಪೊಲೀಸರು ಈಗಾಗಲೇ 12 ಆರೋಪಿಗಳನ್ನು ಬಂಧಿಸಿದ್ದಾರೆ.


