
ಕಾಲೇಜು ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ ; ಏ ಕ್ಯಾ ಹೈ….?

ಕೋಲಾರ : ಕಾಲೇಜು ವಿದ್ಯಾಭ್ಯಾಸಕ್ಕೆ ಹೋಗುವ ವಿದ್ಯಾರ್ಥಿನಿ ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದರೆ ಇದು ನಂಬಲು ಸಾಧ್ಯವಲ್ಲದ ಘಟನೆ ಆದರೂ ನಂಬಬೇಕು.
ಹೌದು ಕೋಲಾರ ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸಧ್ಯ ಈ ಘಟನೆ ಅನೇಕರಿಗೆ ಅಚ್ಚರಿ ಮೂಡಿಸಿದೆ.
ಕಾಲೇಜು ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ. ಮುಳಬಾಗಿಲಿನ ಅನಿಲ್ ಕುಮಾರ್ (21) ಬಂಧಿತ ಯುವಕ. ಈ ಕುರಿತು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಗೆ ಸೋಮವಾರ ಹೊಟ್ಟೆನೋವಿನಿಂದ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ.
ತಕ್ಷಣವೇ ಸಮೀಪದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.