ಕೈ ವಿರುದ್ಧ ಸಿಡಿದೆದ್ದ ಕಮಲ ಪಡೆ ; ವಿಜಯೇಂದ್ರ ಕೇಂದ್ರಬಿಂದು
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ನಡೆದ ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ವರೆಗೆ ಪಾದಯಾತ್ರೆ ಶನಿವಾರ ಪ್ರಾರಂಭವಾಗಿದೆ.
ಶನಿವಾರ ಬೆಳಿಗ್ಗೆ ನಾಡದೇವತೆ ಮೈಸೂರಿನ ಚಾಮುಂಡಿ ದೇವಿ ದರ್ಶನ ಪಡೆದ ವಿಜಯೇಂದ್ರ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ನೇರವಾಗಿ ಬೆಂಗಳೂರಿಗೆ ಆಗಮಿಸಿದ ಇವರು, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ವಿ. ಸೋಮಣ್ಣ, ವಿಪಕ್ಷ ನಾಯಕ ಅಶೋಕ್ ಸೇರಿದಂತೆ ಅನೇಕ ನಾಯಕರ ಉಪಸ್ಥಿತಿಯಲ್ಲಿ ಪಾದಯಾತ್ರೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿ. ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಡೆಯುತ್ತಿರುವ ಪಾದಯಾತ್ರೆಗೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡುತ್ತದೆ. ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಸ್ವತಃ ಡಿಸಿಎಂ ಡಿಕೆಶಿ ಜೈಲಿಗೆ ಹೋಗಲು ಸಿದ್ದ ಎಂದಿದ್ದಾರೆ ಎಂದು ಮಾತಿನ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಇನ್ನೂ ಬಿಜೆಪಿ ಪಾದಯಾತ್ರೆಗೆ ಹಿರಿಯ ನಾಯಕ ಯತ್ನಾಳ್ ಗೈರಾಗಿದ್ದಾರೆ. ಆದರೆ ಬಿಜೆಪಿ ರಾಜ್ಯ ನಾಯಕರು ಹಾಗೂ ಕಾರ್ಯಕರ್ತರ ಮಧ್ಯೆ ಯಶಸ್ವಿಯಾಗಿ ಪಾದಯಾತ್ರೆ ನಡೆಯುತ್ತಿದೆ.