ಬಸವೇಶ್ವರ ಜಯಂತಿ ಪೂರ್ವಭಾವಿ ಸಭೆ
ಬೆಳಗಾವಿ : ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಏಪ್ರಿಲ್ 30 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಬಸವೇಶ್ವರ ವೃತ್ತದ ಬಳಿಯ ಬಸವೇಶ್ವರ ಉದ್ಯಾನವನದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಏ.17) ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏ. 30 ರಂದು ಜರುಗುವ ಬಸವೇಶ್ವರ ಜಯಂತಿ ಅಂಗವಾಗಿ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಲು ಕ್ರಮ ವಹಿಸಬೇಕು. ಎಲ್ಲ ಅಧಿಕಾರಿಗಳು ಜಯಂತಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿದ್ದು, ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಅಚ್ಚುಕಟ್ಟಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಗಜ್ಯೋತಿ ಬಸವೇಶ್ವರರ ಭಾವಚಿತ್ರಗಳನ್ನೊಳಗೊಂಡ ಮೆರವಣಿಗೆಯನ್ನು ಮೇ.4 ರಂದು ಸಾಯಂಕಾಲ 4 ಗಂಟೆಗೆ ಚನ್ನಮ್ಮ ವೃತ್ತದಿಂದ ನಗರದ ಪ್ರಮುಖ ವೃತ್ತಗಳಲ್ಲಿ ಆಯೋಜಿಸುವ ಕುರಿತು ಕಾರ್ಯಕ್ರಮದ ವೇದಿಕೆ ಸಿದ್ಧತೆ, ಉಪನ್ಯಾಸಕರ ಆಯ್ಕೆ ಕುರಿತು ಚರ್ಚಿಸಲಾಯಿತು.
ಶ್ರೀ ಶಂಕರಾಚಾರ್ಯರ ಜಯಂತಿ ಮೇ.2 ರಂದು :
ಅದೇ ರೀತಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮೇ.2 ರಂದು ಕಾವೇರಿ ನಗರದ ಮನುಪ್ರಭಾ ಮಂಗಳ ಕಾರ್ಯಾಲಯದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದ ವೇದಿಕೆ ಸಿದ್ಧತೆ, ಆಮಂತ್ರಣ ಪತ್ರಿಕೆ ಮುದ್ರಣ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮಹಾನಗರ ಉಪ ಆಯುಕ್ತ ಉದಯಕುಮಾರ ತಳವಾರ, ಕನ್ನಡ ಸಂಸ್ಕೃತಿಕ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸೇರಿದಂತೆ ಸಮಾಜದ ಗಣ್ಯರು, ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.


