ಪತ್ನಿ ಮೃತದೇಹ ಒಯ್ಯಲು ಬರುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಸಾವು..! ಅನಾಥರಾದ 3 ಮಕ್ಕಳು
ಬೈಲಹೊಂಗಲ : ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಪತ್ನಿಯನ್ನು ನೋಡಲು ಆಸ್ಪತ್ರೆಗೆ ಬರುದ್ದಾಗ ಪತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ತಂದೆ-ತಾಯಿ ಕಳೆದುಕೊಂಡಿರುವ ಮೂವರು ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಧುರಾ ಕರೆಪ್ಪ (30) ಆತ್ಮಹತ್ಯೆಗೆ ಶರಣಾದ ಪತ್ನಿ ಹಾಗೂ ಕರೆಪ್ಪ ಗಂಗಪ್ಪ ಮಾದರ (36) ಅಪಘಾತದಲ್ಲಿ ಸಾವನ್ನಪ್ಪಿದ ಪತಿ. ದಂಪತಿಗೆ ಮೂವರು ಮಕ್ಕಳು.
ಮಧುರಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅನಾರೋಗ್ಯಕ್ಕೆ ಮನನೊಂದು ವಿಷ ಸೇವಿಸಿದ್ದ ಮಧುರಾ ಅವರನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆ ಸ್ಥಿತಿ ಗಂಭೀರವಾಗಿದ್ದಕ್ಕೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧುರಾ ಕೊನೆಯುಸಿರೆಳೆದಿದ್ದಾರೆ. ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಸುದ್ದಿ ಕೇಳಿ ಪತಿ ಕರೆಪ್ಪ ಗಡಿಬಿಡಿಯಲ್ಲಿ ಬೈಕ್ ನಲ್ಲಿ ಆಸ್ಪತ್ರೆಗೆ ಬರುತ್ತಿದ್ದರು. ಈ ವೇಳೆ ಅರವಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಂದೆ-ತಾಯಿ ಕಳೆದುಕೊಂಡಿರುವ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ.


