ಬೆಳಗಾವಿ : ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ಮತ್ತು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ. ಉದ್ಯೋಗ ಕೊಡಿಸುವುದಾಗಿ ಹಣ ಕೇಳುವ ಮಧ್ಯವರ್ತಿಗಳು ಹಾಗೂ ಏಜೆಂಟರನ್ನು ಯಾರೂ ನಂಬಬಾರದು ಎಂದು ಬೆಮುಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಡಿಸಿಸಿ ಬ್ಯಾಂಕ್‌ನಲ್ಲಿ 83 ಗುಮಾಸ್ತರು, 20 ಸಿಪಾಯಿ ಮತ್ತು ಒಬ್ಬ ಭದ್ರತಾ ಸಿಬ್ಬಂದಿ ಹೀಗೆ ಒಟ್ಟು 104 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇರ ನೇಮಕಾತಿ ಎಂದರೆ ಬ್ಯಾಂಕ್ ಆಡಳಿತ ಮಂಡಳಿಯೇ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡುತ್ತದೆಂಬ ತಪ್ಪು ಕಲ್ಪನೆ ಬೇಡ. ಅಭ್ಯರ್ಥಿಗಳು ಕಡ್ಡಾಯವಾಗಿ ಲಿಖಿತ ಪರೀಕ್ಷೆ ಬರೆದು, ಅದರಲ್ಲಿ ಅರ್ಹತೆ ಪಡೆದ ನಂತರ ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಜುಲೈ 27ರಿಂದ ಆಗಸ್ಟ್ 27ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸೆಪ್ಟೆಂಬರ್ ಅಂತ್ಯದ ವೇಳೆಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಅಭ್ಯರ್ಥಿಗಳಿಗೆ ಪರೀಕ್ಷೆಯ ಸಿದ್ಧತೆಗಾಗಿ ಒಂದೂವರೆ ತಿಂಗಳಿಂದ ಎರಡು ತಿಂಗಳವರೆಗೆ ಸಮಯ ದೊರೆಯಲಿದೆ. ಬ್ಯಾಂಕಿಂಗ್ ವಿಷಯಗಳನ್ನು ಚೆನ್ನಾಗಿ ಅಧ್ಯಯನ ಮಾಡಿ ಪರೀಕ್ಷೆ ಎದುರಿಸಬೇಕು. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಮಾತ್ರ ಅರ್ಹತೆಯ ಆಧಾರದ ಮೇಲೆ ಉದ್ಯೋಗ ದೊರೆಯಲಿದೆ ಎಂದು ಹೇಳಿದ್ದಾರೆ.
ನೇಮಕಾತಿ ಸಂದರ್ಭದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿಕೊಂಡು ಕೆಲವರು ಅಭ್ಯರ್ಥಿಗಳು ಮತ್ತು ಪಾಲಕರಿಂದ ಹಣ ಪಡೆಯುವ ಸಾಧ್ಯತೆಯಿದೆ. ಈ ಹಿಂದೆ ಇಂತಹ ಏಜೆಂಟರನ್ನು ನಂಬಿ ಬೆಳಗಾವಿ ಜಿಲ್ಲೆಯ ಅನೇಕರು ಹಣ ಕಳೆದುಕೊಂಡಿರುವ ಉದಾಹರಣೆಗಳಿವೆ. ಹೀಗಾಗಿ ಯಾರಾದರೂ ಉದ್ಯೋಗ ಕೊಡಿಸುವ ಭರವಸೆ ನೀಡಿ ಹಣ ಕೇಳಿದರೆ ಅವರಿಗೆ ಹಣ ನೀಡದೆ, ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಹಾಗೂ ಅರ್ಹತೆಯ ಮಾನದಂಡದಡಿ ನಡೆಸಲಾಗುತ್ತದೆ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮವಾಗಿ ಅಧ್ಯಯನ ಮಾಡಲು ಪ್ರೋತ್ಸಾಹಿಸಬೇಕು. ಅಭ್ಯರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದು ಅರ್ಹತೆ ಪಡೆಯಬೇಕು ಎಂದು ಶಾಸಕರೂ ಆಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಅವರು ಹಾರೈಸಿದ್ದಾರೆ.


