ಬೆಳಗಾವಿ : ಶಾಲಾ,ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಸಿಸಿಬಿ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಅವರಿಂದ ಗಾಂಜಾ, ಬೈಕ್ ಹಾಗೂ ಮೊಬೈಲ್ ಸೇರಿದಂತೆ ಒಟ್ಟು 1.80 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತರನ್ನು ಅಕ್ಷಯಕುಮಾರ ಅಂಕಲಗಿ (20), ಆದರ್ಶ ಹಿರೇಮಠ (25) ಹಾಗೂ ಮಣಿಕಂಠ ಉಗರಖೋಡಾ (20) ಎಂದು ಗುರುತಿಸಲಾಗಿದೆ. ಈ ಮೂವರು ಆರೋಪಿಗಳು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

ಅದರ ಆಧಾರದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಗೆ ಸುಮಾರು 1 ಕೆಜಿ ಗಾಂಜಾ ಪೂರೈಕೆ ಮಾಡಿದ್ದಾನೆ ಎನ್ನಲಾದ ಮೈತಾಬ್ ಎಂಬಾತ ಪೊಲೀಸರ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.