ಬೆಳಗಾವಿ : ಡಿ. 2 ರಿಂದ ಜರುಗಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಅಧಿವೇಶನವನ್ನು ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಜಿ.ಎಸ್. ಪಾಟೀಲ್ ಸೂಚನೆ ನೀಡಿದರು.
ಸುವರ್ಣ ವಿಧಾನಸೌಧದಲ್ಲಿ ಶನಿವಾರ ಜರುಗಿದ ಚಳಿಗಾಲದ ಅಧಿವೇಶನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿಸೆಂಬರ್ 2 ರಿಂದ 11 ರ ವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಬದ್ಧತೆಯಿಂದ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನವನ್ನು ಯಶಸ್ವಿಗೊಳಿಸಬೇಕು. ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಯಾವುದೇ ರೀತಿಯ ಸಮಸ್ಯೆಗಳನ್ನು ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಧಿವೇಶನಕ್ಕೆ ಸಂಬಂಧಿಸಿದಂತೆ ವಿತರಿಸಲಾಗುವ ಪಾಸ್ಗಳ ನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು. ಪಾಸ್ ವಿತರಣೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ಕಲಾಪಗಳ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಸೂಕ್ತ ಸಮಯವನ್ನು ನಿಗದಿಪಡಿಸಬೇಕು ಎಂದು ಸೂಚಿಸಿದರು.
ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಮಾತನಾಡಿ, ಅಧಿವೇಶನಕ್ಕೆ ಆಗಮಿಸುವ ಹಿರಿಯ ಸಚಿವರು ಹಾಗೂ ಶಾಸಕರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕು. ಸಚಿವರು ಮತ್ತು ಶಾಸಕರು ತಂಗುವ ಹೋಟೆಲ್ಗಳಲ್ಲಿ ತಜ್ಞ ವೈದ್ಯರ ತಂಡವನ್ನು ನಿಯೋಜಿಸಬೇಕು. ಅದೇ ರೀತಿ ಸುವರ್ಣ ವಿಧಾನ ಸೌಧದಲ್ಲಿಯೂ ಸುಸಜ್ಜಿತ ಆಂಬ್ಯುಲೆನ್ಸ್ನೊಂದಿಗೆ ವೈದ್ಯರ ತಂಡವನ್ನು ನಿಯೋಜಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಪೂರ್ವಸಿದ್ಧತೆಗಳ ಕುರಿತು ವಿವರಿಸಿದರು. ಪ್ರಸಕ್ತ ಸಾಲಿನ ಬೆಳಗಾವಿ ಚಳಿಗಾಲದ ಅಧಿವೇಶನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಕಳೆದ ಸಾಲಿನಂತೆಯೇ ಈ ಬಾರಿಯೂ ಹನ್ನೆರಡು ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ವಿಧಾನಸಭೆಯ ಕಾರ್ಯದರ್ಶಿ ಆರ್. ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ, ಪೊಲೀಸ್ ಆಯುಕ್ತರಾದ ನಿಕಮ್ ಪ್ರಕಾಶ್ ಅಮ್ರಿತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್. ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




