ಬೆಳಗಾವಿ : ಬಸವ ಮಂಟಪ ಪುಸ್ತಕದ ವಿರುದ್ಧ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಲೇಖಕ ರವಿ ಹಂಜ್ ಕೊಲೆ ಮಾಡಿದವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ವ್ಯಕ್ತಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವುದಾಗಿ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಇವರು. ಡಿ. 21 ರಂದು ಅಥಣಿಯ ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಲಿಂಗಾಯತ ಮುಖಂಡ ಪ್ರಕಾಶ ಮಹಾಜನ್ ಎಂಬ ವ್ಯಕ್ತಿ ಲೇಖಕ ರವಿ ಹಂಜ್ ಹತ್ಯೆ ಮಾಡಿದರೆ ಐದು ಲಕ್ಷ ರೂ. ನೀಡುವುದಾಗಿ ಪ್ರಚೋದನೆ ಮಾಡಿದ್ದರು.

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ದ್ವೇಷ ಭಾಷಣ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾಷಣ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಎಚ್ಚರಿಕೆ ನೀಡಿದ್ದಾರೆ.