ಬೆಳಗಾವಿಯ ಮೂವರಿಗೆ ಸಚಿವ ಸ್ಥಾನ..? ಯಾವ ಖಾತೆ ಸಿಗುವ ನಿರೀಕ್ಷೆ
ಬೆಂಗಳೂರು : ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು ನಾಳೆ ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಸಚಿವ ಸಂಪುಟ ರಚನೆ ಕಾರ್ಯ ನಡೆದಿದ್ದು ಯಾರಿಗೆ ಯಾವ ಖಾತೆ ಎಂಬ ಲೆಕ್ಕಾಚಾರ ಜೋರಾಗಿದೆ.
ಈ ಬಾರಿ ಬೆಳಗಾವಿಯ 18 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 11 ಸ್ಥಾನ ಗೆಲ್ಲುವ ಮೂಲಕ ಮಹತ್ವದ ಸಾಧನೆ ಮಾಡಿದೆ. ಪ್ರಮುಖವಾಗಿ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷಣ ಸವದಿ, ಸತೀಶ್ ಜಾರಕಿಹೊಳಿ, ಗಣೇಶ್ ಹುಕ್ಕೇರಿ, ಅಶೋಕ್ ಪಟ್ಟಣ, ರಾಜು ಕಾಗೆ ಸೇರಿದಂತೆ ಹಿರಿಯರು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
ಈಗಾಗಲೇ ಸಚಿವಸಂಪುಟ ರಚನೆ ಕುರಿತು ದೆಹಲಿಯಲ್ಲಿ ಹೈಕಮಾಂಡ್ ಮಟ್ಟದ ಸಭೆ ನಡೆದಿದ್ದು, ಸಿದ್ದರಾಮಯ್ಯ, ಡಿಕೆಶಿ ಹಾಗೂ ಪ್ರಮುಖ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಚಿವ ಸಂಪುಟದಲ್ಲಿ ಯಾರೆಗೆಲ್ಲ ಯಾವ ಸ್ಥಾನಮಾನ ನೀಡಬೇಕು ಎಂಬ ಲೆಕ್ಕಾಚಾರ ಕೂಡಾ ಜೋರಾಗಿದ್ದು, ಅಳೆದು ತೂಗಿ ಲೆಕ್ಕಾಚಾರ ಹಾಕಲಾಗುತ್ತಿದೆ.

ಇನ್ನೂ ಬೆಳಗಾವಿಯ ಮೂವರು ಪ್ರಭಾವಿ ಶಾಸಕರ ಪೈಕಿ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಮಾಜ ಕಲ್ಯಾಣ ಇಲಾಖೆ, ಬೆಳಗಾವಿ ಗ್ರಾಮಿಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಅಥಣಿ ಶಾಸಕ ಲಕ್ಷಣ ಸವದಿ ಅವರಿಗೆ ಸಹಕಾರ ಹಾಗೂ ಸಕ್ಕರೆ ಇಲಾಖೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇನ್ನೂ ಸಿದ್ದರಾಮಯ್ಯ ಆಪ್ತ ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಹಾಗೂ ಚಿಕ್ಕೋಡಿ – ಸದಲಗಾ ಕ್ಷೇತ್ರದ ಶಾಸಕ ಗಣೇಶ್ ಹುಕ್ಕೇರಿ ಮತ್ತು ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಅವರಿಗೆ ಸರ್ಕಾರದಲ್ಲಿ ಮಹತ್ವದ ಸ್ಥಾನಮಾನ ಸಿಗುವ ಸಾಧ್ಯತೆ ಇದೆ.


