
ಸಿದ್ದು ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ; ಹರಿಯಾಣದಲ್ಲಿ ಮುಡಾ ಹಗರಣ ಪ್ರಸ್ತಾಪ

ಹರಿಯಾಣ : ಮುಡಾ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದರೆ ಅತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡಿದೆ. ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೌದು ಹರಿಯಾಣದಲ್ಲಿ ಸಧ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ಮುಡಾ ಹಗರಣ ಕಾಂಗ್ರೆಸ್ ಗೆ ತಲೆನೋವು ತರಿಸಿದ್ದರೆ, ಅತ್ತ ಬಿಜೆಪಿಗೆ ಅಸ್ತ್ರವಾಗಿದ್ದಂತು ಸುಳ್ಳಲ್ಲ.
ಮುಡಾ ವಿಚಾರವಾಗಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಈ ಹಿಂದೆ ಹರಿಯಾಣದಲ್ಲಿ ಕಾಂಗ್ರೆಸ್ ಗೆ ಯಾವ ಪರಿಸ್ಥಿತಿ ಬಂದಿತ್ತು ಸಧ್ಯ ಕರ್ನಾಟಕದಲ್ಲಿ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು ಎಂದರು.
ಸಿಎಂ ಸಿದ್ದರಾಮಯ್ಯ ಮೇಲೆ ಜಮೀನು ಹಗರಣದ ಆರೋಪ ಕೇಳಿಬಂದಿದೆ. ಈ ಪ್ರಕರಣ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಚಾಟಿ ಬೀಸಿದ್ದು ಪ್ರಕರಣದ ತನಿಖೆ ಆಗಬೇಕು ಎಂದು ಹೇಳಿದೆ. ಇದೇ ರೀತಿಯ ಪರಿಸ್ಥಿತಿ ಹರಿಯಾಣದಲ್ಲಿ ಬರಬೇಕಾ ಎಂದು ಜನರನ್ನು ಪ್ರಶ್ನಿಸಿದರು.
ಕಳೆದ ಲೋಕಸಭಾ ಚುನಾವಣೆ ಪೂರ್ವದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಬಹಿರಂಗ ಸಮರಕ್ಕೆ ಇಳಿದಿದ್ದರು. ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದೆ, ಜಿಎಸ್ಟಿಯಲ್ಲಿನ ನಮ್ಮ ಪಾಲು ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಜೊತೆಗೆ ಬಹಿರಂಗ ಸಮಾವೇಶದ ಮೂಲಕ ಪ್ರತಿಭಟನೆ ನಡೆಸಿದ್ದರು.