
ಅತಿವೃಷ್ಟಿಯಿಂದ ಹಾನಿಯಾದರೆ 24 ಗಂಟೆಗಳಲ್ಲಿ ಪರಿಹಾರ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಳೆಯ ನಡುವೆಯೂ ನಗರದ ವಿವಿಧ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ನೀರು ನುಗ್ಗಿದ ಮನೆಗಳಿಗೆ 24 ಗಂಟೆಗಳಲ್ಲಿ ತಲಾ ಹತ್ತು ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ಯಳ್ಳೂರ ರಸ್ತೆಯ ಕೇಶವ ನಗರ, ಭಾರತ ನಗರ, ಅನಗೋಳದ ರಘುನಾಥ ಪೇಟ ಮತ್ತಿತರ ಕಡೆಗಳಲ್ಲಿ ಸಂಚರಿಸಿದ ಅವರು, ಯಾವುದೇ ಕಾರಕ್ಕೂ ಪರಿಹಾರ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಳೆಯ ಮನೆಗಳು ಕುಸಿಯುವ ಸಂಭವವಿದ್ದರೆ ಅಂತಹ ಮನೆಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಜನರನ್ನು ಸ್ಥಳಾಂತರಿಸಬೇಕು ಎಂದು ಅಧಿಕಾರಗಳಿಗೆ ತಿಳಿಸಿದರು.
ಯಳ್ಳೂರ ರಸ್ತೆಯ ಕೇಶವ ನಗರದಲ್ಲಿರುವ ಅನ್ನಪೂರ್ಣೇಶ್ವರಿ ಮಂಗಲ ಕಾರ್ಯಾಲಯಕ್ಕೆ ಭೇಟಿ ನೀಡಿದ ಅವರು, ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರ ಸ್ಥಾಪನೆ ಕುರಿತು ಅಧಿಕಾರಿಗಳ ಜತೆ ಚರ್ಚಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಅತಿವೃಷ್ಟಿಯಿಂದ ನಗರದಲ್ಲಿ 10 ಕ್ಕಿಂತ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, 4 ಮನೆಗಳು ಸಂಪೂರ್ಣವಾಗಿ ಕುಸಿದಿವೆ. ನೀರು ನುಗ್ಗಿರುವ ಮನೆಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಅದೇ ರೀತಿ ಮನೆ ಸಂಪೂರ್ಣವಾಗಿ ಕುಸಿದಿರುವುದನ್ನು ಪರಿಶೀಲಿಸಿ 48 ಗಂಟೆಗಳಲ್ಲಿ ಪರಿಹಾರ ನೀಡಲಾಗುವುದು. ಈ ನಿಟ್ಟಿನಲ್ಲಿ ತ್ವರಿತವಾಗಿ ಸಮೀಕ್ಷೆ ಪೂರ್ಣಗೊಳಿಸಿ, ದಾಖಲೆಗಳನ್ನು ಆಧರಿಸಿ ಪರಿಹಾರ ನೀಡಲಾಗುತ್ತದೆ ಎಂದರು.
ಅತಿವೃಷ್ಟಿಯಿಂದ ಬೆಳೆಹಾನಿ-ಶೀಘ್ರ ಪರಿಹಾರ :
ಕೃಷ್ಣಾ ಹಾಗೂ ಮಲಪ್ರಭಾ ನದಿಪಾತ್ರದಲ್ಲಿ ಸದ್ಯಕ್ಜೆ ಪ್ರವಾಹ ಪರಿಸ್ಥಿತಿ ಇರುವುದಿಲ್ಲ. ಆದಾಗ್ಯೂ ಕೆಲವು ಕಡೆಗಳಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿದ್ದು, ಆದಷ್ಟು ಬೇಗನೇ ಸಮೀಕ್ಷೆ ಕೈಗೊಂಡು ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಒಟ್ಟಾರೆ 388 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಅದೇ ರೀತಿ ಪಾಲಿಕೆಯ ವ್ಯಾಪ್ತಿಯಲ್ಲಿ ಸದ್ಯಕ್ಕೆ ಒಂದು ಕಾಳಜಿ ಕೇಂದ್ರವನ್ನು ಗುರುತಿಸಲಾಗಿದೆ. ಪರಿಸ್ಥಿತಿ ಆಧರಿಸಿ ಹೆಚ್ಚುವರಿ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ ಅವರು, ನಗರದ ವ್ಯಾಪ್ತಿಯಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಮಾಹಿತಿಯನ್ನು ನೀಡಿದರು. ತಹಶೀಲ್ದಾರ ಆರ್.ಕೆ.ಕುಲಕರ್ಣಿ, ಪಾಲಿಕೆಯ ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
*************
ಬರಿಗಾಲಿನಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ :
ಯಳ್ಳೂರ ರಸ್ತೆಯ ಕೇಶವ ನಗರದಲ್ಲಿ ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲು ಕೆಲವೆಡೆ ಬರಿಗಾಲಿನಲ್ಲೆ ತೆರಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಗಟಾರು ಸಮಸ್ಯೆಗಳನ್ನು ಪರಿಶೀಲಿಸಿದರು.
ಭಾರತ ನಗರದಲ್ಲಿ ಮನೆಯೊಂದು ಸಂಪೂರ್ಣವಾಗಿ ಕುಸಿದಿರುವ ಮನೆಯನ್ನು ಪರಿಶೀಲಿಸಿದ ಅವರು, ಹಾನಿಯ ಬಗ್ಗೆ ಸ್ಥಳೀಯ ನಿವಾಸಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಅಕ್ಕಪಕ್ಕದ ಮನೆಗಳ ಗೋಡೆ ಕುಸಿದಿರುವುದರಿಂದ ಯಾವುದೇ ಕ್ಷಣ ಮನೆಗಳು ಕುಸಿಯುವ ಸಾಧ್ಯತೆ ಇರುವುದರಿಂದ ಕೂಡಲೇ ಪರಿಹಾರವನ್ನು ನೀಡಬೇಕು. ಪರ್ಯಾಯ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಮನೆಯನ್ನು ಕಳೆದುಕೊಂಡಿರುವ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.