Select Page

Advertisement

ಮಳೆಯಿಂದ ಹಾನಿಯಾದ ಪ್ರದೇಶಗಳ ಜನರಿಗೆ ಆಸರೆಯಾದ ಪಾಟೀಲರ ಜುಗಲಬಂದಿ

ಮಳೆಯಿಂದ ಹಾನಿಯಾದ ಪ್ರದೇಶಗಳ ಜನರಿಗೆ ಆಸರೆಯಾದ ಪಾಟೀಲರ ಜುಗಲಬಂದಿ

ಬೆಳಗಾವಿ : ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಬುಧವಾರ ಚಿಕ್ಕೋಡಿ ಉಪ ವಿಭಾಗದ ವಿವಿಧ ತಾಲ್ಲೂಕುಗಳ ಕೃಷ್ಣಾ ನದಿತೀರದ ಗ್ರಾಮಗಳಿಗೆ,
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಸಿಇಒ ದರ್ಶನ್ ಎಚ್.ವಿ.ಈ ಮೂವರ ಜುಗಲಬಂದಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.

ನೆರೆಯ ಮಹಾರಾಷ್ಟ್ರದ ಜಲಾಶಯಗಳು ಇದುವರೆಗೆ ಸಂಪೂರ್ಣ ಭರ್ತಿಯಾಗಿಲ್ಲ; ಮಳೆಯ ಪ್ರಮಾಣ ಕೂಡ ಕಡಿಮೆಯಾಗುತ್ತಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿರುವುದಿಲ್ಲ. ಆದ್ದರಿಂದ ನದಿತೀರದ ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ. ಆದಾಗ್ಯೂ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರೊಂದಿಗೆ ಡಿಸಿ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರಲ್ಲದೇ ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಭಾಗ ಸೇರಿದ ಪ್ರವಾಹಗಳಿಂದ ಅಂಚಿನಲ್ಲಿರುವ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಲಾಗುತ್ತಿದೆ. ಈಗಾಗಲೇ ವೇದಗಂಗಾ ದೂಧಗಂಗಾ ನದಿಗಳ ನೀರಿನ ಮಟ್ಟವನ್ನು ಪರಿಶೀಲನೆ ಮಾಡಲಾಗಿದೆ.

ಹಾನಿಯಾದ ಮನೆಗಳ ಸಮೀಕ್ಷೆ : ಸದ್ಯದ ಪರಿಹಾರವಾಗಿ ಮನೆಗಳಿಗೆ ನೀರು ನುಗ್ಗಿದರೆ 10 ಸಾವಿರ ಪರಿಹಾರ ನೀಡಲಾಗುತ್ತಿದೆ. ಅದೇ ರೀತಿ ಸಂಪೂರ್ಣ ಹಾನಿಯಾದ ಮನೆಗಳಿಗೆ 5 ಲಕ್ಷ ಪರಿಹಾರ ನೀಡಲಾಗುವುದು. ಅಧಿಕಾರಿಗಳು ಈ ಕುರಿತು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದಾರೆ.

ಸಮೀಕ್ಷೆ ವರದಿಯ ಪ್ರಕಾರ ಜೂನ್ ಹಾಗೂ ಜುಲೈ ತಿಂಗಳಲ್ಲಿ ಒಟ್ಟು 317 ಮನೆಗಳು ಹಾನಿಯಾಗಿದ್ದು, ಪ್ರತಿ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಬಳಿಕ ರಾಜೀವ್ ಗಾಂಧಿ ವಸತಿ ನಿಗಮದಿಂದ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.

ಮಾನವ ಜೀವಹಾನಿ ತಡೆಗೆ ಮುಂಜಾಗ್ರತೆ : ಜೂನ್ ತಿಂಗಳಲ್ಲಿ ಸ್ವಲ್ಪ ಪ್ರಮಾಣದ ಜಾನುವಾರುಗಳ ಹಾನಿಗಳಾಗಿವೆ. ರಾಜ್ಯ ಸರ್ಕಾರ ನೀಡಿದ ಅನುದಾನದಲ್ಲಿ ಜಿಲ್ಲಾಡಳಿತದಿಂದ ಈಗಾಗಲೇ ಅವರಿಗೆ ಪರಿಹಾರ ನೀಡಲಾಗಿದೆ. ಜುಲೈ ತಿಂಗಳಲ್ಲಿ ಯಾವುದೇ ರೀತಿ ಮಾನವ ಹಾಗೂ ಜಾನುವಾರಗಳ ಹಾನಿಯಾಗಿರುವುದಿಲ್ಲ ಎಂದು ತಿಳಿಸಿದರು. 

ಜಿಲ್ಲಾಡಳಿತ, ತಾಲೂಕಾಡಳಿತ, ಪೊಲೀಸ್ ಇಲಾಖೆಯೊಂದಿಗೆ ಕಾರ್ಯನಿರ್ವಹಿಸಲು ಎನ್.ಡಿ.ಆರ್.ಎಫ್- ಎನ್.ಡಿ.ಆರ್.ಎಸ್ ತಂಡಗಳನ್ನು ಕೂಡ ನೀಯೋಜಿಸಲಾಗಿದೆ ಹಾಗೂ 30ಕ್ಕೂ ಅಧಿಕ ಬೋಟ್ ಗಳನ್ನು ಸಜ್ಜುಗೊಳಿಸಲಾಗಿದೆ. ಎಲ್ಲಾ ಇಲಾಖೆಯ ಸಹಯೋಗದೊಂದಿಗೆ ಪ್ರವಾಹ ಪರಿಸ್ಥಿತಿ ನಿರ್ವಹಣೆ ಮಾಡಲಾಗುವದು ಹಾಗೂ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. 

ಸ್ಥಳೀಯ ಶಾಲೆಗಳನ್ನು ಕಾಳಜಿ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಪ್ರವಾಹ ಸಂಭಾವ್ಯ ಇರುವ ಸ್ಥಳಗಳಿಗೆ ಹಾಗೂ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಲಾಶಯಗಳ ನೀರಿನ ಮಟ್ಟ ಕಡಿಮೆ : ಕಲ್ಲೋಳ ಬ್ಯಾರೇಜ್ ನಿಂದ 1 ಲಕ್ಷ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ರಾಜಾಪೂರ ಬ್ಯಾರೇಜ್ ನಿಂದ 88 ಸಾವಿರದ 500 ಕ್ಯೂಸೆಕ್  ಹಾಗೂ 23 ಸಾವಿರದ 760 ಕ್ಯೂಸೆಕ್ ದೂದಗಂಗಾ ಬ್ಯಾರೇಜ್ ನಿಂದ ನೀರು ಬರುತ್ತಿದೆ. 2 ಲಕ್ಷ 90 ಸಾವಿರ ಕ್ಯೂಸೆಕ್ಸ್ ನೀರು ಬಂದಲ್ಲಿ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಪ್ರವಾಹ ಪರಿಸ್ಥಿತಿಗೆ ಹೋಲಿಸಿದರೆ 38% ಮಾತ್ರ ನೀರು ಹರಿದು ಬರುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಲಾಶಯಗಳು ಪೂರ್ಣ ಭರ್ತಿಯಾಗಿಲ್ಲ : ಮಹಾರಾಷ್ಟ್ರದ ಕೊಯ್ನಾ ಜಲಾಶಯ 38% ನಷ್ಟು ಮಾತ್ರ ಭರ್ತಿಯಾಗಿದೆ.  ಇಲ್ಲಿಯವರೆಗೆ ಮಹಾರಾಷ್ಟ್ರದ ಜಲಾಶಯದಿಂದ ನೀರು ಬಿಡುತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಜಲಾಶಯಗಳು ಪೂರ್ಣ ಪ್ರಮಾಣ ಭರ್ಟಿಯಾಗಿ, 2 ಲಕ್ಷ 90 ಸಾವಿರ ಕ್ಯೂಸೆಕ್ಸ್ ಗಿಂತ ಹೆಚ್ಚು ನೀರು ಬಂದರೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಈ ಕುರಿತು ಮುಂಜಾಗ್ರತವಾಗಿ ಪ್ರವಾಹ ನಿರ್ವಹಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಒಂದು ವೇಳೆ ಪ್ರವಾಹ ಪರಿಸ್ಥಿತಿ ಎದುರಾದರೆ ಜನರ ಪ್ರಾಣ ರಕ್ಷಣೆಗೆ ಅನುಕೂಲವಾಗುವಂತೆ ಪೊಲೀಸ್ ಇಲಾಖೆಯು ಕೂಡ ಸೂಕ್ತ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದರು.
ನದಿ ತೀರದ ಗ್ರಾಮಗಳು ಹಾಗೂ ಸೇತುವೆಗಳ ಮೇಲೆ ನಿರಂತರ ನಿಗಾ ವಹಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಎನ್.ಡಿ.ಆರ್.ಎಫ್., ಎಸ್‌.ಡಿ.ಆರ್.ಎಫ್ ಹಾಗೂ ಅಗ್ನಿಶಾಕಮ ದಳದ ಸಮನ್ವಯದೊಂದಿಗೆ ಜನರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸಂಭವನೀಯ ಪ್ತವಾಹ ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾ ಪಂಚಾಯತ ವತಿಯಿಂದ ಕೂಡ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ವಿವರಿಸಿದರು.

ಈಗಾಗಲೇ ಶಾಲಾ ಕಟ್ಟಡಗಳ ದುರಸ್ತಿ ಮತ್ತು ಮೂಲಸೌಕರ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಕಾಳಜಿ ಕೇಂದ್ರಗಳ ಸ್ಥಾಪನೆಗೆ ಅಗತ್ಯವಾದ ಸೌಲಭ್ಯಗಳನ್ನು ಕೂಡ ತಕ್ಷಣವೇ ಒದಗಿಸಲು ಅನುಕೂಲವಾಗುವಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೃಷ್ಣಾ ನದಿಯಲ್ಲಿ ಬೋಟ್ ಮೂಲಕ ಸಂಚರಿಸುವ ಮೂಲಕ ತುರ್ತು ರಕ್ಷಣಾ ಕಾರ್ಯದ ಸಿದ್ಧತೆಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ತಹಶೀಲ್ದಾರರು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *