ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ (36) ಮೃತಪಟ್ಟವರು. ಹೊಲದಲ್ಲಿ ಕೃಷಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮೂಡಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನಾಗನೂರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.


