Select Page

ನಂದಗಡದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದ ಕಾಯಕಲ್ಪ ; ಶೀಘ್ರದಲ್ಲೇ ಕಾಮಗಾರಿ ಪೂರ್ಣ – ತಂಗಡಗಿ

ನಂದಗಡದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದ ಕಾಯಕಲ್ಪ ; ಶೀಘ್ರದಲ್ಲೇ ಕಾಮಗಾರಿ ಪೂರ್ಣ – ತಂಗಡಗಿ

ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ(ವೀರಭೂಮಿ) ಕಾಮಗಾರಿಗಳು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಳೆದ 3-4 ವರ್ಷಗಳಿಂದ ಮ್ಯೂಸಿಯಂ ಕಾಮಗಾರಿ ಚಾಲನೆಯಲಿದ್ದು,

ಚಳಿಗಾಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಸಂಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮ್ಯೂಸಿಯಂ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು.

ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯದಲ್ಲಿ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ(ವೀರಭೂಮಿ) ಕಾಮಗಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಒಟ್ಟು 261 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 59 ಕೋಟಿ ವೆಚ್ಚದಲ್ಲಿ ಒಟ್ಟು 13 ಎಕರೆ ಜಾಗೆಯಲ್ಲಿ ನಂದಗಡ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ನಂದಗಡ ಮ್ಯೂಸಿಯಂ ವಿವಿಧ ಕಾಮಗಾರಿಗಳ ಪ್ರಗತಿಯಲ್ಲಿದ್ದು, ಯಾವುದೇ ರೀತಿಯ ಕಾಮಗಾರಿಗಳು ಬಾಕಿ ಉಳಿಯಬಾರದು. ಮುಂದಿನ ಒಂದು ವಾರದೊಳಗೆ ಕಂಪೌಂಡ, ರಸ್ತೆ, ಕಲಾಕೃತಿಗಳು ಸೇರಿದಂತೆ ಅಗತ್ಯ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಸಿನಿಮಾ ಆ್ಯನಿಮೇಟರ್ ವಿದ್ಯುನ್ಮಾನ ತಂತ್ರಜ್ಞಾನ ಅಳವಡಿಸಲು ಕೆಲವು ಕಾಮಗಾರಿಗಳು ಬಾಕಿ ಇವೆ. ಅವುಗಳನ್ನು ಕೂಡಲೇ ಪ್ರಾರಂಭಿಸಬೇಕು. ಸರ್ಕಾರದಿಂದ ಗುತ್ತಿಗೆದಾರರ ಬಿಲ್ ಬಾಕಿ ಉಳಿಯದಂತೆ ನೋಡಿಕೊಳ್ಳಗುವುದು. ಗುತ್ತಿಗೆದಾರರು ಆತಂಕ ಪಡದೆ ಡಿಸೆಂಬರ್ 9 ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಸೂಚಿಸಿದರು.

ಸಂಗೊಳ್ಳಿ ರಾಯಣ್ಣ ಅವರ ಪೂರ್ಣ ಪ್ರಮಾಣದ ಪರಿಚಯಕ್ಕೆ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದೆ. ಸಂಗೊಳ್ಳಿ ರಾಯಣ್ಣ ಅಧ್ಯಯನ ಕೇಂದ್ರ, ಗ್ರಂಥಾಲಯ ಸೇರಿದಂತೆ ಸಾಕಷ್ಟು ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಡಿಸೆಂಬರ್ ಅಂತ್ಯದೊಳಗೆ ಮ್ಯೂಸಿಯಂ ಉದ್ಘಾಟನೆ ಮಾಡಲಾಗುವುದು ಎಂದು ಸಚಿವ ತಂಗಡಗಿ ಹೇಳಿದರು.

ಶಾಲಾ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಇತಿಹಾಸ ಪರಿಚಯ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿ ಪಡಿಸಲಾಗುವುದು. ಜನರಿಗೆ ಅನುಕೂಲವಾಗುವ ಪ್ರವೇಶ ದರ ನಿಗದಿ ಪಡಿಸಿ ಜಿಲ್ಲೆಯಲ್ಲಿ ಅತ್ಯುತ್ತಮ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಉನ್ನತ ಮಾದರಿ ಮ್ಯೂಸಿಯಂ ನಿರ್ಮಾಣಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ

ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.‌ ಸಭೆಯ ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳ ಮತ್ತು ರಾಯಣ್ಣ ಕೆರೆಯಲ್ಲಿ ಪ್ರತಿಮೆ ಸ್ಥಾಪನೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ, ಖಾನಾಪೂರ ಶಾಸಕ ವಿಠ್ಠಲ ಹಲಗೇಕರ, ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!