
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಧ್ವಜಾರೋಹಣ

ಬೆಳಗಾವಿ : ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸತೀಶ್ ಜಾರಕಿಹೊಳಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ. ‘ಸ್ವಾತಂತ್ರಂತ್ರ್ಯ’ ಎಂದರೆ ಸ್ವಾಭಿಮಾನ. ತಮ್ಮ ಬದುಕನ್ನು ಪಣಕ್ಕಿಟ್ಟು ದೇಶಕ್ಕೆ ಇಂತಹ ಸ್ವಾಭಿಮಾನವನ್ನು ತಂದುಕೊಟ್ಟ ಮಹನೀಯರನ್ನು ಇಂದು ನಾವೆಲ್ಲರೂ ನೆನಪಿಸಿಕೊಳ್ಳಬೇಕಿದೆ. ದೇಶ ಸ್ವತಂತ್ರಗೊಂಡು ಇಂದಿಗೆ 76 ವರ್ಷಗಳಾದವು.
ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ್ಯವು ಜಗತ್ತಿನ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ ಎಂದರು.
ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಬೆಳಗಾವಿ ಜಿಲ್ಲೆಯ ಪಾತ್ರವು ಕಡಿಮೆ ಇಲ್ಲ. ಅಪ್ರತಿಮ ಹೋರಾಟಗಾರರು, ಅಪ್ಪಟ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಕೊಡುಗೆ ನೀಡಿರುವ ನಮ್ಮ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು ಎಂಬುದು ಎಲ್ಲರಿಗೂ ತಿಳಿದ ವಿಷಯ.
ಕಿತ್ತೂರು ರಾಣಿ ಚೆನ್ನಮ್ಮ ಮೊಳಗಿಸಿದ ಸ್ವಾತಂತ್ರ್ಯದ ಕಹಳೆಯು ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತು. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದ ಚೆನ್ನಮ್ಮ, ಆಂಗ್ಲರ ಈಸ್ಟ್ ಇಂಡಿಯಾ ಕಂಪೆನಿಗೆ ದುಸ್ವಪ್ನವಾಗಿ ಕಾಡಿದಳು.
ಅದೇ ಕಿತ್ತೂರು ಸಂಸ್ಥಾನದಲ್ಲಿ ಸೇನಾಧಿಪತಿಯಾಗಿದ್ದ ಸಂಗೊಳ್ಳಿ ರಾಯಣ್ಣ ಆಂಗ್ಲರ ಬಂದೂಕುಗಳಿಗೆ ಬೆದರದೇ ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ನೇಣುಗಂಬಕ್ಕೇರಿದ ಅಪ್ರತಿಮ ದೇಶಭಕ್ತ. ಅಂತಹ ರಾಯಣ್ಣ ಹುಟ್ಟಿದ್ದು ಆಗಸ್ಟ್ 15ರಂದು ವೀರಮರಣವನ್ನಪ್ಪಿದ್ದು ಜನವರಿ 26.
ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮತ್ತೊಬ್ಬ ಮಹನೀಯರು ಶ್ರೀ ಗಂಗಾಧರ ದೇಶಪಾಂಡೆ. ‘ಕರ್ನಾಟಕದ ಸಿಂಹ’ ಹಾಗೂ ‘ಕರ್ನಾಟಕದ ಖಾದಿ ಭಗೀರಥ’ ಎಂದು ಗುರುತಿಸಿಕೊಂಡಿದ್ದ ದೇಶಪಾಂಡೆಯವರ ಕೊಡುಗೆ ಅಪಾರ. ಇವರ ಜತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅನೇಕರನ್ನು ಇಂದು ನಾವು ನೆನಪಿಸಿಕೊಳ್ಳಬೇಕು.
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಹಾದಿಯಲ್ಲಿ ದೃಢವಾದ ಹೆಜ್ಜೆಯನ್ನು ಇಟ್ಟಿದೆ.
ಜನರಿಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿದೆ.
ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಐದು “ಗ್ಯಾರಂಟಿ ಯೋಜನೆ”ಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಬೆಳಗಾವಿ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸುವುದರ ಜತೆಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ 350 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ರಸ್ತೆ ಮೇಲ್ಸೆತುವೆ ಹಾಗೂ ಸದ್ಯಕ್ಕೆ ಇರುವ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಅಂದಾಜು 300 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಜಿಲ್ಲಾಡಳಿತ ಕಚೇರಿ ಸಂಕೀರ್ಣ ನಿರ್ಮಿಸಲು ಉದ್ಧೇಶಿಸಲಾಗಿದೆ. ಬೆಳಗಾವಿ ನಗರ ಸೇರಿದಂತೆ ನಮ್ಮ ಜಿಲ್ಲೆಯಲ್ಲಿ ಕೈಗೊಂಡ ಕೆಲವು ಅಭಿವೃದ್ಧಿ ಕೆಲಸಗಳನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು, ಸಂಸದರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.